ಬೆಂಗಳೂರು: ವಿಪರೀತ ವೇಗದಿಂದ ಚಲಿಸುತ್ತಿದ್ದ ಕಾರ್ ರಸ್ತೆ ಮಧ್ಯದ ಡಿವೈಡರ್ ಜಂಪ್ ಮಾಡಿ ಎದುರು ಬರುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು ನಾಲ್ವರು ಕಾಲೇಜ್ ವಿದ್ಯಾರ್ಥಿಗಳು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬುಧುವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ನಾಲ್ವರೂ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರು ಗಾರ್ಡನ್ ಸಿಟಿ ಕಾಲೇಜ್ ವಿದ್ಯಾರ್ಥಿಗಳಾಗಿದ್ದು, ಮೂವರು ವಿದ್ಯಾರ್ಥಿಗಳು, ಓರ್ವ ಯುವತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿರುವ ಇವರು ಲಾಂಗ್ ಡ್ರೈವ್ ಗೆ ಹೋಗಿ ವಾಪಸ್ ಬರುವಾಗ ಘಟನೆ ನಡೆದಿದೆ. ವೈಷ್ಣವಿ, ಭರತ್, ಸಿರೀಲ್, ವೆಂಕಟ್ ಮೃತಪಟ್ಟವರು ಎಂದು ಹೇಳಲಾಗಿದೆ. ಸಿರಿಕೃಷ್ಣ, ಅಂಕಿತ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.