ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಡಿ ಮಂಗಳವಾರ ಬಂಧಿಸಲ್ಪಟ್ಟಿರುವ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಮಾಡಿದ್ದಾರೆ.
ನಟ ಚೇತನ್ ಫೆಬ್ರವರಿ 16 ರಂದು ಟ್ವೀಟ್ ಮಾಡಿದ್ದು, ಅದರಲ್ಲಿ ಹಿಜಾಬ್ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್ ಜಡ್ಜ್ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎಂದು ಹೇಳಲಾಗಿದೆ. ಇದರ ವಿರುದ್ಧ ಶೇಷಾದ್ರಿಪುರಂ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದರು. ಬಳಿಕ ಐಪಿಸಿ ಸೆಕ್ಷನ್ 505(2) ಮತ್ತು 504 ಅಡಿ ಎಫ್ಐಆರ್ ( FIR – Cr No40/2022) ದಾಖಲಿಸಿದ್ದಾರೆ.
ವಕೀಲ ಕೆ.ಬಾಲನ್ ಅವರು ಚೇತನ್ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು, ಬುಧವಾರ ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ನಟನ ಮೇಲೆ ಜಾಮೀನು ರಹಿತ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಾಧ ಸಾಬೀತಾದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.