ಬೆಂಗಳೂರು: ಅಧಿಕೃತ ಕಾರ್ಯಕ್ರಮಗಳಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡಲು, ಕರ್ನಾಟಕ ಹೈಕೋರ್ಟ್ ಮುಖ್ಯ ನಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದಲ್ಲಿ ಆಡಳಿತಾತ್ಮಕ ಪೂರ್ಣ ನ್ಯಾಯಾಲಯ ಸಭೆ ನಿರ್ಣಯ ಕೈಗೊಂಡಿದೆ.
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ನ್ಯಾಯಾಲಯದ ಎಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲಿ ಇರಿಸಲು ಕರ್ನಾಟಕ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ಸುತ್ತೋಲೆ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿರುವ ಹೈಕೋರ್ಟ್‌ನ ಪ್ರಧಾನ ಪೀಠದಲ್ಲಿ, ಧಾರವಾಡ ಮತ್ತು ಕಲಬುರಗಿಯ ಪೀಠಗಳಲ್ಲಿ ಮತ್ತು ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಮತ್ತು ಸಂವಿಧಾನ ದಿನಾಚರಣೆಯಂತಹ ನ್ಯಾಯಾಲಯಗಳ ಎಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಫೋಟೋ ಇಡಬೇಕು ಎಂದು ಸೂಚಿಸಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದಲ್ಲಿ ಶುಕ್ರವಾರ ನಡೆದ ಆಡಳಿತಾತ್ಮಕ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಲಾಗುವ ಅಧಿಕೃತ ಕಾರ್ಯಕ್ರಮಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರವಿಡಲು ಕ್ರಮ ಕೈಗೊಳ್ಳುವಂತೆ ಆಯಾ ನ್ಯಾಯಾಲಯಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ
ಧಾರವಾಡ ಮತ್ತು ಕಲಬುರಗಿ ಪೀಠದ ಹೆಚ್ಚುವರಿ ರಿಜಿಸ್ಟ್ರಾರ್‌ಗಳು ಹಾಗೂ ಜಿಲ್ಲಾ ನ್ಯಾಯಾಧೀಕರಣದ ಸಂಬಂಧಪಟ್ಟ ಎಲ್ಲಾ ಘಟಕದ ಮುಖ್ಯಸ್ಥರು ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ನ್ಯಾಯಾಲಯಗಳಿಗೆ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನ ಮತ್ತು ಸಂವಿಧಾನ ದಿನಾಚರಣೆಯಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರ ಹಾಕಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ ಅವರು ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.
ರಾಯಚೂರಿನಲ್ಲಿ ಜನವರಿ 26 ರಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು (ಪಿಡಿಎಸ್‌ಜೆ) ರಾಷ್ಟ್ರಧ್ವಜಾರೋಹಣ ಮಾಡುವ ಮೊದಲು ಮಹಾತ್ಮ ಗಾಂಧಿಯವರ ಭಾವಚಿತ್ರದ ಜೊತೆಗೆ ಇರಿಸಲಾಗಿದ್ದ ಡಾ. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದಿದ್ದಾರೆ ಎಂಬ ಆರೋಪಿಸಿ ವಕೀಲರು ಮತ್ತು ಸಂಘಟನೆಗಳು ನ್ಯಾಯಾಲಯದ ಆವರಣ ಪ್ರತಿಭಟನೆ ನಡೆಸಿತ್ತು.